
75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ.
ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಮತ್ತು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಹುದು ಎಂಬ ಕುರಿತು ಈ ಸಮಿತಿ ಮಾರ್ಗಸೂಚಿಗಳನ್ನು, ನಿರ್ದೇಶನಗಳನ್ನು ನೀಡಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಈ ಸಮಿತಿಯು 259 ಸದಸ್ಯರನ್ನು ಒಳಗೊಂಡಿದ್ದು, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, 28 ರಾಜ್ಯಗಳ ಮುಖ್ಯಮಂತ್ರಿಗಳು, ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್, ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ರಾಜ್ಯಪಾಲರು, ಕೇಂದ್ರ ಸಚಿವರು, ವಿರೋಧ ಪಕ್ಷಗಳ ಮುಖಂಡರಾದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮುಂತಾದವರು ಈ ಸಮಿತಿಯಲ್ಲಿದ್ದಾರೆ.